
ಬೆಂಗಳೂರು: ಹೊಸ ಬಿಪಿಎಲ್ ರೇಷನ್ ಕಾರ್ಡ್ಗಳಿಗಾಗಿ ಕಾಯುತ್ತಿರುವ ಅರ್ಹ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಅನರ್ಹ ಫಲಾನುಭವಿಗಳ ಕಾರ್ಡ್ಗಳನ್ನು ರದ್ದುಗೊಳಿಸುವ ಪರಿಶೀಲನೆ ಹಿನ್ನೆಲೆಯಲ್ಲಿ ಹೊಸ ಕಾರ್ಡ್ ವಿತರಣೆ ಸ್ಥಗಿತಗೊಂಡಿತ್ತು. ಇದೀಗ ಶೀಘ್ರದಲ್ಲೇ ಹೊಸ ಅರ್ಜಿಗಳನ್ನು ಸ್ವೀಕರಿಸುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ಹೊಸ ಬಿಪಿಎಲ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ, ಅರ್ಜಿ ಸಲ್ಲಿಕೆಗೆ ಶೀಘ್ರವೇ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಇದರಿಂದ ಹೊಸ ಕಾರ್ಡ್ಗಾಗಿ ಕಾಯುತ್ತಿರುವ ಅರ್ಹ ಬಡ ಕುಟುಂಬಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.
ಇನ್ನು ಪಡಿತರ ಚೀಟಿಯ ಇ-ಕೆವೈಸಿ ಪ್ರಕ್ರಿಯೆಯನ್ನು ಸರಳಗೊಳಿಸಲು ಸರ್ಕಾರ ‘ಅನ್ನಸೇವೆ’ ಆ್ಯಪ್ ಬಿಡುಗಡೆ ಮಾಡಿದೆ. ಈ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲದೆ, ಮೊಬೈಲ್ ಮೂಲಕವೇ ಮನೆಯಲ್ಲಿದ್ದುಕೊಂಡು ಇ-ಕೆವೈಸಿ ಪೂರ್ಣಗೊಳಿಸಬಹುದು.
ಮೊದಲ ಹಂತದಲ್ಲಿ 8 ಜಿಲ್ಲೆಗಳಿಗೆ ಮಾತ್ರ ಅವಕಾಶ
ಸದ್ಯ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್ ಹಾಗೂ ಕೊಪ್ಪಳ ಜಿಲ್ಲೆಗಳ ಫಲಾನುಭವಿಗಳಿಗೆ ಮಾತ್ರ ಆ್ಯಪ್ ಬಳಕೆಗೆ ಅವಕಾಶ ನೀಡಲಾಗಿದೆ. ಎರಡನೇ ಹಂತದಲ್ಲಿ ಅಕ್ಟೋಬರ್ 10ರಿಂದ ರಾಜ್ಯದ ಉಳಿದ ಜಿಲ್ಲೆಗಳಿಗೂ ಈ ಸೌಲಭ್ಯ ವಿಸ್ತರಿಸಲಾಗುತ್ತದೆ.
ಅನ್ನಸೇವೆ ಆ್ಯಪ್ ಮೂಲಕ ಇ-ಕೆವೈಸಿ ಮಾಡುವ ವಿಧಾನ:
ಇ-ಕೆವೈಸಿ ಪೂರ್ಣಗೊಳಿಸಲು ಫಲಾನುಭವಿಗಳು ಗೂಗಲ್ ಪ್ಲೇ ಸ್ಟೋರ್ನಿಂದ CEG Face KYC, AadhaarFace RD ಹಾಗೂ ಅನ್ನಸೇವೆ ಎಂಬ ಮೂರು ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಬಳಿಕ ಆಧಾರ್ ಆಧಾರಿತ ಫೇಸ್ ಆಥಂಟಿಕೇಷನ್ ತಂತ್ರಜ್ಞಾನ ಬಳಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇನ್ನು ಇ-ಕೆವೈಸಿ ಸಲ್ಲಿಕೆಗೆ ನೀಡಲಾಗಿದ್ದ ಗಡುವನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸಲಾಗಿದೆ.






















