
ಕಾರ್ಕಳ: ಕಾರ್ಕಳ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ರೀತಿಯ ಪೋಸ್ಟ್ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಶಾಸಕರಿಗೆ ಜೀವ ಬೆದರಿಕೆಯ ರೀತಿಯಲ್ಲಿ ಹಾಗೂ “ತಲೆ ಬೇಕು” ಎಂಬ ಅರ್ಥ ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬಂಧಿತ ಪ್ರಸಾದ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಹಿನ್ನೆಲೆ, ಅದರ ಉದ್ದೇಶ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರ ಅಂಶಗಳ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.




































