ಸಾಮೂಹಿಕ ಹಾಗೂ ವೈಯಕ್ತಿಕ ಸಂಕಲ್ಪಕ್ಕೆ ಪ್ರತ್ಯೇಕ ವ್ಯವಸ್ಥೆಗೆ ಚಿಂತನೆ

ದಕ್ಷಿಣ ಕನ್ನಡ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಆಶ್ಲೇಷ ಬಲಿ ಪೂಜೆಗಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಶೇಷ ದಿನಗಳಲ್ಲಿ 2,000ರಿಂದ 3,000ಕ್ಕೂ ಅಧಿಕ ಪೂಜೆಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನೂಕುನುಗ್ಗಲು ನಿಯಂತ್ರಿಸಲು ದೇವಸ್ಥಾನದಲ್ಲಿ ಸಾಮೂಹಿಕ ಸಂಕಲ್ಪ ವ್ಯವಸ್ಥೆ ಜಾರಿಗೆ ತರಲಾಗಿತ್ತು. ಇದೀಗ ಈ ವ್ಯವಸ್ಥೆಯನ್ನು ರದ್ದುಗೊಳಿಸಿ ಮಹತ್ವದ ಬದಲಾವಣೆ ಮಾಡಲಾಗಿದೆ.
ಸಾಮೂಹಿಕ ಸಂಕಲ್ಪ ವ್ಯವಸ್ಥೆಗೆ ಬಹುತೇಕ ಭಕ್ತರಿಂದ ಮೆಚ್ಚುಗೆ ವ್ಯಕ್ತವಾಗಿದ್ದರೂ, ಪ್ರತಿಯೊಬ್ಬರ ಧಾರ್ಮಿಕ ಭಾವನೆಗೆ ಆದ್ಯತೆ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಭಕ್ತರ ಸುರಕ್ಷತೆ ಕುರಿತು ನೀಡಿದ ನಿರ್ದೇಶನಗಳ ಹಿನ್ನೆಲೆಯಲ್ಲಿ ವ್ಯವಸ್ಥೆಯನ್ನು ಹಿಂಪಡೆಯಲಾಗಿದೆ.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರ ಮಾಹಿತಿ ಪ್ರಕಾರ, ಇಂದಿನಿಂದಲೇ ಸಾಮೂಹಿಕ ಸಂಕಲ್ಪದ ಬದಲು ಸಂಕಲ್ಪ ಮಂದಿರದಲ್ಲಿ ಹಿಂದಿನಂತೆ ಪ್ರತ್ಯೇಕ ವೈಯಕ್ತಿಕ ಸಂಕಲ್ಪ ಸೇವೆ ಆರಂಭಿಸಲಾಗಿದೆ. ಇದರಿಂದ ಭಕ್ತರಿಗೆ ತಮ್ಮ ಇಚ್ಛೆಯಂತೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮುಂದಿನ ದಿನಗಳಲ್ಲಿ ಭಕ್ತರ ದಟ್ಟಣೆ ನಿಯಂತ್ರಿಸಲು ಮಾಸ್ಟರ್ ಪ್ಲಾನ್ ಅಡಿಯಲ್ಲಿ ವಿಶಾಲವಾದ ನೂತನ ಸಂಕಲ್ಪ ಮಂದಿರ ನಿರ್ಮಿಸಲು ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿದೆ. ಇಲ್ಲಿ ಸಾಮೂಹಿಕ ಹಾಗೂ ವೈಯಕ್ತಿಕ ಸಂಕಲ್ಪಕ್ಕೆ ಪ್ರತ್ಯೇಕ ವ್ಯವಸ್ಥೆ ಇರಲಿದ್ದು, ಭಕ್ತರು ತಮ್ಮ ಅನುಕೂಲಕ್ಕೆ ತಕ್ಕಂತೆ ಆಯ್ಕೆ ಮಾಡಿಕೊಳ್ಳಬಹುದು.
ಭಕ್ತರಿಗೆ ಸುಗಮ ದರ್ಶನ ಹಾಗೂ ಉತ್ತಮ ಪೂಜಾ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ದೇವಸ್ಥಾನ ಆಡಳಿತ ಮಂಡಳಿ ಕ್ರಮ ಕೈಗೊಳ್ಳುತ್ತಿದ್ದು, ನೂತನ ಬದಲಾವಣೆಗಳಿಗೆ ಭಕ್ತರು ಸಹಕರಿಸುವಂತೆ ಮನವಿ ಮಾಡಿದೆ.
























