
ಮಂಗಳೂರು: ಹಾಡಹಗಲೇ ಕಾಲೇಜು ಆವರಣದಿಂದಲೇ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳನ್ನು ಹಲವು ವ್ಯಕ್ತಿಗಳು ಬಲವಂತವಾಗಿ ಕರೆದೊಯ್ದಿರುವ ಘಟನೆ ಮಂಗಳೂರಿನ ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮುಸ್ಲಿಂ ಸಮುದಾಯದ ಯುವತಿಯಾಗಿರುವ ಈಕೆ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು, ಇದೇ ಕಾರಣಕ್ಕೆ ಆಕೆಯ ಕುಟುಂಬಸ್ಥರೇ ಕಾಲೇಜಿಗೆ ಬಂದು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲವು ಮಂದಿ ಯುವತಿಯನ್ನು ಎಳೆದೊಯ್ದು ಥಾರ್ ವಾಹನದಲ್ಲಿ ಕರೆದೊಯ್ಯುತ್ತಿರುವ ದೃಶ್ಯ ವಿಡಿಯೋದಲ್ಲಿ ದಾಖಲಾಗಿದೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಯುವತಿಯನ್ನು ಕುಟುಂಬಸ್ಥರೇ ಬಲವಂತವಾಗಿ ಕರೆದೊಯ್ದಿರುವ ಆರೋಪವಿದ್ದು, ಇಂತಹ ಕೃತ್ಯ ಕಾನೂನುಬಾಹಿರವಾಗಿದೆ ಎಂದು ತಿಳಿಸಿದ್ದಾರೆ.
ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ಮತ್ತು ಯಾರೊಂದಿಗೆ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಹಕ್ಕು ಆಕೆಗಿದೆ. ಘಟನೆ ನಡೆದ ಕೂಡಲೇ ಕಾಲೇಜು ಆಡಳಿತ ಮಂಡಳಿ ಅಥವಾ ಸ್ಥಳದಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರೆ, ವಾಹನವನ್ನು ನಗರದಿಂದ ಹೊರಹೋಗುವ ಮುನ್ನವೇ ತಡೆದು ಯುವತಿಯನ್ನು ರಕ್ಷಿಸಲು ಸಾಧ್ಯವಾಗುತ್ತಿತ್ತು ಎಂದು ಆಯುಕ್ತರು ತಿಳಿಸಿದ್ದಾರೆ.
























































































