‘ಮನೆಯವರ ಜೊತೆ ಹೋಗಲ್ಲ’ ಎಂದ ಯುವತಿ

ಮಂಗಳೂರು: ಮಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿರುವ ಕೋಣಾಜೆ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿಕೊಂಡಿದ್ದು, ಪೋಷಕರೊಂದಿಗೆ ತೆರಳಲು ಇಷ್ಟವಿಲ್ಲ ಎಂದು ಯುವತಿ ತಿಳಿಸಿದ್ದಾಳೆ.
ಪ್ರಕರಣದ ಹಿನ್ನೆಲೆ:
ನವೆಂಬರ್ 19ರ ಗುರುವಾರ ಸಂಜೆ ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜು ಆವರಣದಲ್ಲಿ ಈ ಘಟನೆ ನಡೆದಿತ್ತು. ಪುಂಜಾಲಕಟ್ಟೆ ಮೂಲದ ಯುವತಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದು, ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಬಿಡಿಎಸ್ ಓದುತ್ತಿರುವ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದೆ.
ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜಿಗೆ ಆಗಮಿಸಿ, ಆಕೆಯ ವಿರೋಧದ ನಡುವೆಯೂ ಬಲವಂತವಾಗಿ ಎಳೆದುಕೊಂಡು ಹೋಗಿ ಥಾರ್ ವಾಹನದಲ್ಲಿ ಕೂರಿಸಿದ್ದರು. ಈ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇರಳಂನ ಸಂಬಂಧಿಕರ ಮನೆಯಲ್ಲಿ ಇರಿಸಲಾಗಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಮಂಗಳೂರಿಗೆ ಕರೆತಂದಿದ್ದಾರೆ.
ಪೊಲೀಸರ ಮುಂದೆ ಹೇಳಿಕೆ ನೀಡಿರುವ ಯುವತಿ, ಪೋಷಕರು ಅಥವಾ ಮನೆಯವರೊಂದಿಗೆ ತೆರಳಲು ತನಗೆ ಇಷ್ಟವಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ. ಯುವತಿ ವಯಸ್ಕಳಾಗಿರುವುದರಿಂದ ತನ್ನ ಇಚ್ಛೆಯಂತೆ ವಾಸಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ವೈದ್ಯಕೀಯ ತಪಾಸಣೆ ಬಳಿಕ ಆಕೆಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ.
ಇನ್ನೊಂದೆಡೆ, ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಆರೋಪಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದ್ದು, ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸಬಹುದಾದ ಅಪರಾಧವಾಗಿರುವುದರಿಂದ BNSS ನಿಯಮದಂತೆ ನೋಟಿಸ್ ಜಾರಿಗೊಳಿಸಲಾಗುತ್ತಿದೆ.

























































































