
ನವದೆಹಲಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತೀವ್ರಗೊಂಡಿರುವ ಬೆನ್ನಲ್ಲೇ, ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರಾಹುಲ್ ಗಾಂಧಿ ಅವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಚರ್ಚೆ ನಡೆಸಿದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಹೊರತು, ಬೇರೆಯವರ ಒತ್ತಡಕ್ಕೆ ಮಣಿದು ಅಲ್ಲ. ಆದರೆ ಅಧಿಕಾರದಿಂದ ಕೆಳಗಿಳಿದ ಬಳಿಕ ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದ್ದು, ಸ್ಟಿಂಗ್ ಪ್ರಕರಣದ ಬೆಳವಣಿಗೆಗಳಿಂದ ತೀವ್ರ ಬೇಸರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಹಾಗೂ ಮತ್ತೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯೂ ಅಲ್ಲ ಎಂದು ಸ್ಪಷ್ಟಪಡಿಸಿರುವ ಸಿದ್ದರಾಮಯ್ಯ, ಸ್ಟಿಂಗ್ ವಿಡಿಯೋ ಸೃಷ್ಟಿಸಿದವರು ಯಾರು ಮತ್ತು ಅದರ ಹಿಂದಿನ ಉದ್ದೇಶವೇನು ಎಂಬುದು ತಮಗೆ ತಿಳಿದಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ತಮ್ಮ ಹೆಸರಿಗೆ ಮಸಿ ಬಳಿಯುವ ರಾಜಕೀಯ ಷಡ್ಯಂತ್ರದಿಂದ ಇಮೇಜ್ಗೆ ಧಕ್ಕೆಯಾದರೆ ಚುನಾವಣಾ ಪ್ರಚಾರಕ್ಕೂ ಬರುವುದಿಲ್ಲ ಎಂದು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಎದುರು ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

























