ಪರೀಕ್ಷೆ ನಡೆದ ಮರುದಿನವೇ, ಪರೀಕ್ಷೆಯನ್ನು ರದ್ದುಗೊಳಿಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ

ನವದೆಹಲಿ: ಈಗಾಗಲೇ ನೀಟ್ ಪರೀಕ್ಷೆಯ ಫಲಿತಾಂಶದಲ್ಲಿ ಅಕ್ರಮದ ಆರೋಪ ದೇಶದೆಲ್ಲೆಡೆ ಸುದ್ದಿ ಮಾಡಿದ್ದು, ಇದೀಗ ವಿಶ್ವವಿದ್ಯಾಲಯ ಅನುದಾನ ಆಯೋಗ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪದ ಅಲೆ ಎದ್ದಿದೆ.
ಜೂನ್ 18ರಂದು, UGC -NET ಪರೀಕ್ಷೆಯು ನಡೆದಿದ್ದು, ದೇಶದ 317 ನಗರಗಳಲ್ಲಿ 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು.
ಇದೀಗ ಪರೀಕ್ಷೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪರೀಕ್ಷೆ ನಡೆದ ಮರುದಿನವೇ UGC -NET ಪರೀಕ್ಷೆಯನ್ನು ರದ್ದುಗೊಳಿಸಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು, ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಹಿನ್ನೆಲೆ ಪರೀಕ್ಷೆಯನ್ನು ಪುನರ್ ನಡೆಸಲು ತೀರ್ಮಾನಿಸಲಾಗಿದೆ ಹಾಗೂ ಆರೋಪದ ಬಗ್ಗೆ ಸಮಗ್ರ ತನಿಖೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ತಿಳಿಸಿದೆ.