‘ಬರಪೀಡಿತ ತಾಲೂಕು ಘೋಷಿಸಿ, ಇಲ್ಲವೇ ಖುರ್ಚಿ ಖಾಲಿ ಮಾಡಿ’
ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಕಿಡಿ

ಕಾರ್ಕಳ: ಮಾಜಿ ಸಚಿವ ಸುನಿಲ್ ಕುಮಾರ್ ರೈತರ ಸಮಸ್ಯೆಗಳನ್ನು ಕಡೆಗಣಿಸಿರುವ ರಾಜ್ಯ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರೈತರ ಹಿತವನ್ನು ಮರೆತ ಸೊಕ್ಕಿನ ಸರ್ಕಾರಕ್ಕೆ ಸ್ವಪಕ್ಷದ ಶಾಸಕರೇ ತಿರುಗಿಬಿದ್ದಿದ್ದು ಸರ್ಕಾರದ ವೈಫಲ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಒಬ್ಬ ಹಿರಿಯ ಶಾಸಕ ಹಾಗೂ ಮಾಜಿ ಸಚಿವರೊಬ್ಬರು ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡದೇ ಇದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಗಡುವು ನೀಡುತ್ತಿರುವುದು ಈ ಸರ್ಕಾರದ ರೈತ ವಿರೋಧಿ ನೀತಿಗೆ ಸಾಕ್ಷಿಯಾಗಿದೆ ಎಂದು X ನಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಉತ್ತರ ಕರ್ನಾಟಕದಲ್ಲಿ ತೀವ್ರ ಅಭಾವವಿದ್ದರೂ, ಅಧಿಕಾರ ಹಾಗೂ ಕಮಿಷನ್ ದಂಧೆಯಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಕಣ್ಣೀರು ಕಾಣುತ್ತಿಲ್ಲ. ಮಾಜಿ ಸಚಿವ ಹೆಚ್.ಕೆ. ಪಾಟೀಲರು ಸಿಎಂ ಆದೇಶವನ್ನು ಅಧಿಕಾರಿಗಳು ಧಿಕ್ಕರಿಸುತ್ತಿದ್ದಾರೆ. ಆ ಮೂಲಕ ಸರ್ಕಾರಕ್ಕೆ ಮಸಿ ಬಳಿಯುತ್ತಿದ್ದಾರೆ ಎಂದು ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳ ಮಾತಿಗೂ ಬೆಲೆಯಿಲ್ಲ, ಸಚಿವರ ಆದೇಶಕ್ಕೂ ಬೆಲೆಯಿಲ್ಲ. ಉತ್ತರ ಕರ್ನಾಟಕದ 73 ತಾಲೂಕುಗಳ ಪೈಕಿ 27 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದೆ ಕಡೆಗಣಿಸಿರುವುದು ಈ ಸರ್ಕಾರದ ರೈತ ವಿರೋಧಿ ನೀತಿಗೆ ಕೈಗನ್ನಡಿಯಾಗಿದೆ.
ಅಧಿಕಾರಿಗಳ ಅಸಮರ್ಥತೆ, ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕದ ರೈತರು ಬೀದಿಗೆ ಬಿದ್ದಿದ್ದಾರೆ. ತಕ್ಷಣವೇ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, ಇಲ್ಲವೇ ಖುರ್ಚಿ ಖಾಲಿ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.






























































































































