
ಬೆಂಗಳೂರು: ವಂದೇ ಮಾತರಂ ಗಾಯನವನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ ಕಾಂಗ್ರೆಸ್ ಪಕ್ಷದ ನಿಲುವಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ಈ ವಿಚಾರವನ್ನು ರಾಜಕೀಯಗೊಳಿಸುತ್ತಿದೆ ಎಂದು ಆರೋಪಿಸಿದ ಅವರು ವಂದೇ ಮಾತರಂ ಕುರಿತು ಕಾಂಗ್ರೆಸ್ ಬಹಳ ಹಿಂದಿನಿಂದಲೂ ಹೊಂದಿರುವ ನಿಲುವನ್ನೇ ಸರ್ಕಾರ ಅನುಸರಿಸುತ್ತಿದೆ. ವಂದೇ ಮಾತರಂ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾವು ಗೌರವಿಸುತ್ತೇವೆ ಎಂದರು.
ಕರ್ನಾಟಕ ಸರ್ಕಾರದ ಆದೇಶದಂತೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣಗಳನ್ನು ಮಾತ್ರ ಹಾಡಲಾಗುತ್ತದೆ. ಆದರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ.
ಈ ವರ್ಷದ ಜನವರಿಯಲ್ಲಿ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರಗೀತೆ ‘ಜನ ಗಣ ಮನ’ದ ಮೊದಲು ವಂದೇ ಮಾತರಂನ ಎಲ್ಲ ಆರು ಚರಣಗಳನ್ನು ಹಾಡುವಂತೆ ಸೂಚಿಸಿತ್ತು. ವಂದೇ ಮಾತರಂನ 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಈ ನಿರ್ದೇಶನ ನೀಡಲಾಗಿತ್ತು.
ಆದರೆ, ಆಗಸ್ಟ್ 19ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ 1937ರ ನಿರ್ಣಯವನ್ನು ಮುಂದುವರಿಸಲು ತೀರ್ಮಾನಿಸಲಾಗಿತ್ತು. ಅದರಂತೆ ಪಕ್ಷದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣಗಳನ್ನು ಮಾತ್ರ ಹಾಡಲಾಗುತ್ತದೆ.
ಇದನ್ನು ಬಿಜೆಪಿ ವಿರೋಧಿಸಿದ್ದು, ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ‘ತುಷ್ಟೀಕರಣದ ರಾಜಕೀಯ’ ಎಂದು ಟೀಕಿಸಿದೆ.




































