
ಬೆಂಗಳೂರು: ರಾಜ್ಯದಲ್ಲಿ ಪಟಾಕಿ ಸಿಡಿಸುವುದಕ್ಕೆ ಸಮಯದ ಮಿತಿ ವಿಧಿಸಲಾಗಿದ್ದು, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಪಟಾಕಿಗಳಿಂದ ವಾಯುಮಾಲಿನ್ಯ ಹೆಚ್ಚಾಗಿ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಸಿರು ಪಟಾಕಿಗಳನ್ನೇ ಬಳಸುವಂತೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುವುದು. ಸುಪ್ರೀಂಕೋರ್ಟ್ ಕೂಡ ಪಟಾಕಿಗಳ ಬಳಕೆಗೆ ಸಂಬಂಧಿಸಿದಂತೆ ಹಲವು ಮಾರ್ಗಸೂಚಿಗಳನ್ನು ನೀಡಿದೆ. ಅದರಂತೆ ನಿಗದಿತ ಅವಧಿಯಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ.
ಪಟಾಕಿಗಳ ತಯಾರಿಕೆಯಲ್ಲಿ ಸೋಡಿಯಂ, ರೇಡಿಯಂ ಸೇರಿದಂತೆ ವಿವಿಧ ಲೋಹಗಳು ಹಾಗೂ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ. ಹೀಗಾಗಿ ಹಸಿರು ಪಟಾಕಿಗಳ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಕೇಂದ್ರ ಸರ್ಕಾರವೂ ಹಸಿರು ಪಟಾಕಿಗಳ ಬಳಕೆಯನ್ನು ಉತ್ತೇಜಿಸಿದ್ದು, ಇವುಗಳ ಬಳಕೆಯಿಂದ ಶೇ.30ರಷ್ಟು ಮಾಲಿನ್ಯವನ್ನು ಕಡಿಮೆ ಮಾಡಲು ಸಾಧ್ಯ ಎಂದು ಸಚಿವರು ತಿಳಿಸಿದ್ದಾರೆ.
























