
ಬೆಂಗಳೂರು: ಖಾಸಗಿ ಶಾಲೆಗಳ ದುಬಾರಿ ಶುಲ್ಕದಿಂದ ಬೇಸತ್ತ ಪೋಷಕರು ಸರ್ಕಾರಿ ಶಾಲೆಗಳತ್ತ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲೂ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಈ ತರಗತಿಗಳು ನಡೆಯುತ್ತಿರುವ ಶಾಲೆಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ರಾಜ್ಯದಲ್ಲಿ ಸದ್ಯ ಸುಮಾರು 6ರಿಂದ 7 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ನಡೆಯುತ್ತಿವೆ. ಹೊಸದಾಗಿ ಯಾವ ಶಾಲೆಗಳಲ್ಲಿ ಈ ತರಗತಿಗಳನ್ನು ಆರಂಭಿಸಬಹುದು ಎಂಬುದನ್ನು ಗುರುತಿಸಲು ಇಲಾಖೆ ಸಮೀಕ್ಷೆ ನಡೆಸಲಿದೆ. ಪೋಷಕರ ಬೇಡಿಕೆ ಹೆಚ್ಚಿರುವ ಶಾಲೆಗಳಿಗೆ ಮೊದಲ ಆದ್ಯತೆ ನೀಡುವ ಸಾಧ್ಯತೆಯಿದೆ. ಕೆಲವು ಶಾಲೆಗಳಲ್ಲಿ ಅಧಿಕೃತ ಅನುಮತಿ ಇಲ್ಲದಿದ್ದರೂ SDMC ಹಾಗೂ ಶಿಕ್ಷಕರು ಸ್ವಂತ ವೆಚ್ಚದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ನಡೆಸುತ್ತಿದ್ದು, ದಾಖಲಾತಿ ಮತ್ತು ಬೇಡಿಕೆ ಆಧರಿಸಿ ಇವುಗಳ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.
ಅಂಗನವಾಡಿ ಹಾಗೂ ಸರ್ಕಾರಿ ಶಾಲೆಗಳ ನಡುವೆ ಸಮನ್ವಯ ಕಲ್ಪಿಸುವ ಉದ್ದೇಶದಿಂದಲೂ ಈ ಯೋಜನೆ ರೂಪಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ ಆರಂಭಿಸಿರುವ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಧಿಯಡಿ ಕೇವಲ 42 ದಿನಗಳಲ್ಲಿ 48 ಸಾವಿರ ಮಕ್ಕಳು ದಾಖಲಾಗಿದ್ದಾರೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯದ ಇತರ ಭಾಗಗಳಿಗೂ ಯೋಜನೆ ವಿಸ್ತರಿಸಲು ಸರ್ಕಾರ ಚಿಂತಿಸುತ್ತಿದೆ. ಇದರಿಂದ ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚುವುದರ ಜೊತೆಗೆ ಬಡ ಹಾಗೂ ಮಧ್ಯಮ ವರ್ಗದ ಪೋಷಕರ ಶಿಕ್ಷಣ ವೆಚ್ಚದ ಹೊರೆಯೂ ಕಡಿಮೆಯಾಗುವ ನಿರೀಕ್ಷೆಯಿದೆ.























































































