
ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಹೆಸರನ್ನು ಎತ್ತಿಹಿಡಿಯುತ್ತಿರುವ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವೆಗಳ ಎಲ್ಲಾ ನೇರ ನೇಮಕಾತಿಗಳಲ್ಲಿ ಶೇ.2ರಷ್ಟು ಮೀಸಲಾತಿ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ. ಸಾಮಾನ್ಯ, ಎಸ್ಸಿ, ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಲ್ಲೂ ಈ ಮೀಸಲಾತಿ ಅನ್ವಯವಾಗಲಿದೆ.
ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಿದ್ದು, ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಒಲಿಂಪಿಕ್ಸ್, ಏಷ್ಯನ್ ಗೇಮ್ಸ್ ಸೇರಿದಂತೆ ಅಧಿಸೂಚಿತ 34 ಕ್ರೀಡೆಗಳ ಸಾಧಕರಿಗೆ ಕೃಪಾಂಕದ ಸೌಲಭ್ಯವೂ ದೊರೆಯಲಿದೆ.
ಕ್ರೀಡಾಪಟುಗಳ ಸಾಧನೆಗೆ ಗೌರವ ನೀಡುವುದರ ಜೊತೆಗೆ, ಅವರ ಕ್ರೀಡಾ ಬದುಕಿನ ನಂತರವೂ ಉತ್ತಮ ಭವಿಷ್ಯ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.






















