
ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ದ್ವಿತೀಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ಈ ವೇಳೆ ಜಿಲ್ಲೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬರುವಂತೆ ಶಾಲಾ ಶಿಕ್ಷಣ ಇಲಾಖೆ ಶ್ರಮಿಸಬೇಕು. ವಿಫಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರಿಕೆ ಮಾಡಲಾಗುವುದು ಎಂದು ಶಿಕ್ಷಣ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.
ಮಕ್ಕಳ ಮುಂದಿನ ಭವಿಷ್ಯ ರೂಪಿಸಲು ಶೇಕಡಾ 100ರಷ್ಟು ಫಲಿತಾಂಶ ಸಾಧಿಸುವತ್ತ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುದನ್ನು ಗಮನಿಸಿ, ಅವರಿಗೆ ವಿಶೇಷ ತರಗತಿಗಳನ್ನು ನಡೆಸಬೇಕು. ಶಾಲಾ ಶಿಕ್ಷಕರಿಗೆ ಕಾರ್ಯಾಗಾರಗಳು ಹಾಗೂ ಮಾರ್ಗದರ್ಶನ ಶಿಬಿರಗಳನ್ನು ಆಯೋಜಿಸಿ, ಮುಂದಿನ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸಲು ಪ್ರಯತ್ನಿಸಬೇಕು ಎಂದು ತುಮಕೂರು ಹಾಗೂ ಮಧುಗಿರಿ ಡಿಡಿಪಿಐಗಳಿಗೆ ಸೂಚಿಸಿದ್ದಾರೆ.






























































































































