
ಬೆಂಗಳೂರು: ರಾಜ್ಯದಲ್ಲಿ ಮಳೆ ಹಾಗೂ ಬಿಸಿಲು ಒಂದೇ ಸಮಯದಲ್ಲಿ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಿದೆ. ಜಾಗತಿಕವಾಗಿ ‘ಸೂಪರ್ ಎಲ್ ನಿನೊ’ ಪರಿಣಾಮದಿಂದ ತಾಪಮಾನ ಹೆಚ್ಚುವ ಸಾಧ್ಯತೆ ಇದ್ದು, ಸಾಂಕ್ರಾಮಿಕ ರೋಗಗಳ ಭೀತಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಹಠಾತ್ ತಾಪಮಾನ ಏರಿಕೆಯಿಂದ ದೇಹದಲ್ಲಿ ನೀರಿನ ಕೊರತೆ, ಸುಸ್ತು, ತಲೆನೋವು ಹಾಗೂ ಹೀಟ್‌ಸ್ಟ್ರೋಕ್ ಉಂಟಾಗುವ ಸಾಧ್ಯತೆಯಿದೆ. ಹವಾಮಾನ ಬದಲಾವಣೆಯಿಂದ ಮಕ್ಕಳ ಮತ್ತು ವೃದ್ಧರಲ್ಲಿ ವೈರಲ್ ಜ್ವರ, ಕೆಮ್ಮು, ನೆಗಡಿ ಹಾಗೂ ಉಸಿರಾಟದ ಸಮಸ್ಯೆಗಳು ಹೆಚ್ಚಾಗುವ ಆತಂಕವಿದೆ.
ಇನ್ನೊಂದೆಡೆ ಮಳೆಯಿಂದ ಅಲ್ಲಲ್ಲಿ ನೀರು ನಿಲ್ಲುತ್ತಿರುವುದರಿಂದ ಸೊಳ್ಳೆಗಳ ಸಂತತಿ ಹೆಚ್ಚಾಗುತ್ತಿದೆ. ಪರಿಣಾಮ ಡೆಂಗ್ಯೂ, ಚಿಕೂನ್‌ಗುನ್ಯಾ ಮತ್ತು ಮಲೇರಿಯಾದಂತಹ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಿದೆ.
ಸಂಭಾವ್ಯ ಆರೋಗ್ಯ ಸಮಸ್ಯೆ ಎದುರಿಸಲು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧ, ORS ಪ್ಯಾಕೆಟ್‌ಗಳು ಮತ್ತು ರಕ್ತ ಪರೀಕ್ಷಾ ಸೌಲಭ್ಯಗಳನ್ನು ಸಿದ್ಧವಾಗಿಡಲು ಸೂಚಿಸಲಾಗಿದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ, ತಳಮಟ್ಟದಲ್ಲಿ ಪರಿಸ್ಥಿತಿ ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಹೆಚ್ಚು ನೀರು ಕುಡಿಯಬೇಕು, ಕುದಿಸಿ ಆರಿಸಿದ ನೀರನ್ನು ಸೇವಿಸಬೇಕು ಮತ್ತು ಮನೆಯ ಸುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.




































