
ಉಡುಪಿ: ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೋಮವಾರ ತಿಳಿಸಿದ್ದಾರೆ.
ಪ್ರದೀಪ್ ಪೂಜಾರಿ ಸಾವಿನ ಪ್ರಕರಣ ಕರಾವಳಿಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು. ತನಿಖೆಯ ಬಗ್ಗೆ ಮೃತನ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿ, ಸಿಐಡಿ ಅಥವಾ ಸಿಬಿಐ ತನಿಖೆಗೆ ಒತ್ತಾಯಿಸಿದ್ದವು. ಸಿಐಡಿ ತನಿಖೆ ನಡೆಸದಿದ್ದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದವು.
ಇನ್ನು ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಕರ್ತವ್ಯ ಲೋಪದ ಕುರಿತು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು. ವರದಿಯ ಆಧಾರದಲ್ಲಿ ಹಿರಿಯಡ್ಕ ಠಾಣೆಯ ಪಿಎಸ್ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ವರ್ಗಾಯಿಸಲಾಗಿತ್ತು. ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿತ್ತು.
ಮತ್ತೊಂದೆಡೆ, ಆರೋಪಿಗಳ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ, ಮಧ್ಯಪ್ರದೇಶ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದ ಮೂರು ಕೇಸ್ಗಳ ತನಿಖೆಯೂ ಸಿಐಡಿ ವ್ಯಾಪ್ತಿಗೆ ಬಂದಿದ್ದು, ಮುಂದಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮುಂದುವರಿಸಲಿದ್ದಾರೆ.





















































































