
ಬೀದರ್: ʻವಕ್ಫ್ ಹಠಾವೋ ಭಾರತ್ ದೇಶ್ ಬಚಾವೋʼ ಘೋಷವಾಕ್ಯದಡಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಂಡ್ ಟೀಂ ಗಡಿ ಜಿಲ್ಲೆಯಲ್ಲಿ ಇಂದಿನಿಂದ ವಕ್ಫ್ ವಿರುದ್ಧ ಹೋರಾಟ ನಡೆಸಲಿದೆ.
ಇಂದು ಬೆಳಗ್ಗೆ 9 ಗಂಟೆ ವೇಳೆಗೆ ನಗರದ ಝರಣಿ ನರಸಿಂಹ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಕ್ಫ್ ವಿರುದ್ಧ ಹೋರಾಟ ಆರಂಭಿಸಿದ್ದು ಇದು ಡಿಸೆಂಬರ್ 1ರ ವರೆಗೆ ಐದು ಜಿಲ್ಲೆಗಳಲ್ಲಿ ನಡೆಯಲಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಮಾಜಿ ಸಂಸದ ಪ್ರತಾಪ್ ಸಿಂಹ, ಜಿ.ಎಂ ಸಿದ್ದೇಶ್ವರ್, ಹೊಳಲ್ಕೆರೆ ಚಂದ್ರಪ್ಪ ಸೇರಿ ಹಲವರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೀದರ್‌ನ ಗಣೇಶ ಮೈದಾನದಲ್ಲಿ ಸಭೆ ನಡೆಸಿ ರೈತರು, ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲಿದೆ. ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆಗಳಿದ್ದು ಸಂಜೆ 4 ಗಂಟೆಗೆ ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಲಿದೆ. ಸುಮಾರು 300 ರೈತ ಕುಟುಂಬಗಳ 960 ಎಕರೆ ಜಮೀನಿನಲ್ಲಿ ವಕ್ಫ್ ಹೆಸರು ಉಲ್ಲೇಖವಾಗಿದ್ದ ಚಟ್ನಳ್ಳಿ ಗ್ರಾಮಕ್ಕೆ ರೆಬಲ್ಸ್ ಟೀಂ ಭೇಟಿ ನೀಡಲಿದೆ



















