ಆಕ್ರಮಣಕಾರಿ ಬೀದಿ ನಾಯಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಹೊಸ ಆದೇಶವನ್ನು ಹೊರಡಿಸಿದ್ದು ಅದೇನೆಂದರೆ ಮಾನವ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸುತ್ತಿರುವ ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಗತ್ಯವಿದ್ದರೆ ದಯಾಮರಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳು ಹಿಂದೇಟು ಹಾಕಬಾರದು ಎಂದು ಸ್ಪಷ್ಟಪಡಿಸಿದೆ.
2025ರ ನವೆಂಬರ್‌ನಲ್ಲಿ ಸಾರ್ವಜನಿಕ ಸ್ಥಳಗಳು ಹಾಗೂ ಜನಸಂದಣಿ ಪ್ರದೇಶಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ನೀಡಿದ್ದ ಆದೇಶವನ್ನು ಮರುಪರಿಶೀಲಿಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ವೇಳೆ ಮಂಗಳವಾರ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು. ಆದರೆ, ಹಿಂದಿನ ತೀರ್ಪನ್ನು ಬದಲಾಯಿಸುವಂತೆ ಕೇಳಿದ್ದ ಹಲವು ಅರ್ಜಿಗಳನ್ನು ಪೀಠ ತಳ್ಳಿಹಾಕಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಹಾಗೂ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಬೀದಿ ನಾಯಿಗಳಿಂದ ಮಕ್ಕಳು, ವೃದ್ಧರು ಮತ್ತು ದುರ್ಬಲ ವರ್ಗದ ಜನರಿಗೆ ಉಂಟಾಗುತ್ತಿರುವ ಅಪಾಯವನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿತು. ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸುವುದು ರಾಜ್ಯಗಳ ಜವಾಬ್ದಾರಿಯಾಗಿದ್ದು, ಜನಹಿತಕ್ಕೆ ಆದ್ಯತೆ ನೀಡಬೇಕು ಎಂದು ಕೋರ್ಟ್ ತಿಳಿಸಿದೆ.



























