
ಕಾರ್ಕಳ: ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಎಂಬಲ್ಲಿ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪತ್ನಿ ಪ್ರತಿಮ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.
ಪೊಲೀಸರು ಅಕ್ಟೋಬರ್ 25ರಂದು ಬಂಧಿತ ಪ್ರತಿಮಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನವೆಂಬರ್ 7ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಈ ವೇಳೆ ಮೂರು ದಿನಗಳ ಕಾಲ ಪೋಲಿಸ್ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್ ಹೆಗ್ಡೆಯನ್ನು ಪೊಲೀಸರು ಅಕ್ಟೋಬರ್ 28ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಇದೀಗ ಇಬ್ಬರ ನ್ಯಾಯಾಂಗ ಬಂಧನದ ಅವಧಿ ಮುಗಿದ ಕಾರಣ ಕಾರ್ಕಳ ನ್ಯಾಯಾಲಯಕ್ಕೆ ಆರೋಪಿಗಳಿಬ್ಬರನ್ನು ಹಾಜರುಪಡಿಸಿದ್ದು ನ್ಯಾಯಾಲಯವು ಇಬ್ಬರ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸಿದೆ.



















