
ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯಿದೆ ಜಾರಿ ಮಾಡಲು ಮುಂದಾಗಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ(ಹೋರಾಟ, ತಡೆಯುವಿಕೆ) ವಿಧೇಯಕ 2025’ಕ್ಕೆ ಅನುಮೋದನೆ ಪಡೆಯುವ ನಿರೀಕ್ಷೆಯಿದೆ.
ಜೂನ್‌ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಕರಡು ವಿಧೇಯಕ ಪ್ರಸ್ತಾಪಿಸಲಾಗಿದ್ದು, ಅಂತಿಮ ವಿಧೇಯಕವು ಇಂದು ಮಂಡನೆಯಾಗಲಿದೆ. ಅನುಮೋದನೆ ನೀಡಿದ ಬಳಿಕ ಬೆಳಗಾವಿ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸುವ ಸಾಧ್ಯತೆಯಿದೆ.
ಈ ಕಾಯ್ದೆಯಡಿ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ 5 ಸಾವಿರ ರು. ದಂಡದ ಜತೆಗೆ ಶಿಕ್ಷೆ ವಿಧಿಸಬಹುದು ಎಂದು ವಿಧೇಯಕದಲ್ಲಿ ತಿಳಿಸಲಾಗಿದೆ.



















