
ಉಡುಪಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ಈ ವೇಳೆ ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳದೆ ಸಾರ್ವಜನಿಕರಿಗೆ ಸಮಸ್ಯೆ ಮಾಡುತ್ತಿದೆ. ಕಾಮಗಾರಿಯನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.
2018 ರಿಂದಲೂ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪ್ರಾರಂಭವಾದರೂ ಈವರೆಗೂ ಪೂರ್ಣಗೊಂಡಿಲ್ಲ. ಹೀಗಾಗಿ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುವುದರ ಜೊತೆಗೆ ಅನೇಕ ಅಪಘಾತಗಳು, ಸಾವು ನೋವುಗಳು ಆಗಿವೆ. ಸಾರ್ವಜನಿಕರು ಈ ಕುರಿತು ಆಕ್ರೋಶ ವ್ಯಕ್ತಪಡಿಸುತ್ತಿದ್ದು ಇವೆಲ್ಲಕ್ಕೂ ಜಿಲ್ಲಾಡಳಿತ ಉತ್ತರ ನೀಡಬೇಕಾಗಿದೆ.
ಕಾಮಗಾರಿಯ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಸಾಗದೆ ಪೂರ್ಣಗೊಂಡಿಲ್ಲ. ಅಭಿಯಂತರು ಹಾಗೂ ಗುತ್ತಿಗೆದಾರರು ಈ ಎಲ್ಲವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕಾಮಗಾರಿಯ ಪ್ರಗತಿಯ ವೇಗವನ್ನು ಹೆಚ್ಚಿಸಿ ಆದಷ್ಟು ಬೇಗ ಪೂರ್ಣಗೊಳಿಸಬೇಕು. ಇಲ್ಲವಾದರೆ ಕಾನೂನು ರೀತಿಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರಾಷ್ಟ್ರೀಯ ಹೆದ್ದಾರಿ 169ಎ ಕರಾವಳಿ ಬೈಪಾಸ್ ನಿಂದ ಮಲ್ಪೆಯವರೆಗೆ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಪೂರ್ಣ ಪ್ರಮಾಣದಲ್ಲಿ ತ್ವರಿತವಾಗಿ ಕೈಗೊಂಡು ವಿದ್ಯುತ್ ಕಂಬ ಬದಲಾವಣೆ ಕಾರ್ಯವನ್ನು ಆದಷ್ಟು ಶೀಘ್ರ ಮಾಡಬೇಕು ಎಂದು ಸೂಚನೆ ನೀಡಿದರು.



















