
ನವದೆಹಲಿ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿಯಾಗಿ ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕ್ರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಮಾರ್ಚ್ನಲ್ಲಿ ಪ್ರಸ್ತಾವನೆ ಸಲ್ಲಿಸಿದ್ದು ಇದೀಗ ಕರ್ನಾಟಕ ಸರ್ಕಾರದ ಪ್ರಸ್ತಾವಕ್ಕೆ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಅನುಮತಿ ನೀಡಲು ನಿರಾಕರಣೆ ಮಾಡಿದೆ.
ನವದೆಹಲಿಯಲ್ಲಿ ಜೂನ್ 26ರಂದು ನಡೆದ ಸಲಹಾ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ನೀಡುವ ಬಗ್ಗೆ ಚರ್ಚೆ ನಡೆಯಿತು. ‘ಕೇಂದ್ರದಿಂದ ಅನುಮೋದನೆ ಪಡೆಯುವ ಮುನ್ನವೇ ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ಬಳಕೆ ಮಾಡಲಾಗಿದೆ ಎಂಬುದನ್ನು ಅಧಿಕಾರಿಗಳ ತಂಡವು ಬೊಟ್ಟು ಮಾಡಿ ತೋರಿಸಿದ್ದು ನಿಯಮ ಉಲ್ಲಂಘಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು’ ಎಂದು ಸಲಹಾ ಸಮಿತಿ ನಿರ್ದೇಶನ ನೀಡಿ ಪ್ರಸ್ತಾವವನ್ನು ಮುಂದಿನ ಸಭೆಗೆ ಮುಂದೂಡಿತು.
ಪಶ್ಚಿಮ ಘಟ್ಟದ ಎತ್ತಿನಹೊಳೆಯಿಂದ 24 ಟಿಎಂಸಿ ನೀರು ಹರಿಸುವ ಈ ಯೋಜನೆಗೆ ಈ ಹಿಂದೆ 13.93 ಹೆಕ್ಟೇರ್ ಅರಣ್ಯ ಬಳಕೆಗೆ 2016ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. 33 ಷರತ್ತುಗಳನ್ನು ವಿಧಿಸಿ 2016ರಲ್ಲಿ ಅನುಮೋದನೆ ಕೊಡಲಾಗಿತ್ತು. ಆದರೆ ಬಹುತೇಕ ಷರತ್ತುಗಳನ್ನು ಪಾಲನೆ ಮಾಡಿಲ್ಲ. ಕಾಮಗಾರಿ ಸಂದರ್ಭದಲ್ಲಿ ಭೂಕುಸಿತ ಹಾಗೂ ಮಣ್ಣಿನ ಕೊರೆತ ಉಂಟಾಗಿದೆ ಎಂದು ಎನ್ಜಿಟಿಯ ಮೇಲ್ವಿಚಾರಣಾ ತಂಡವು 2019ರಲ್ಲಿ ವರದಿ ಸಲ್ಲಿಸಿತ್ತು. ಭೂಕುಸಿತ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಜತೆಗೆ ಅನುಮೋದನೆಗಿಂತ ಹೆಚ್ಚುವರಿ ಅರಣ್ಯ ಬಳಸಲಾಗಿದೆ. ಕಾಮಗಾರಿಯಿಂದಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಆದರೆ, ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ತಜ್ಞರ ತಂಡವು ಆಕ್ಷೇಪ ವ್ಯಕ್ತಪಡಿಸಿತ್ತು.