ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಕೂಗು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಒತ್ತಡ ಇತ್ಯಾದಿ ವಿಚಾರಗಳಿಂದ ಕಾಂಗ್ರೆಸ್ ಒಳಬೇಗುದಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಆಂತರಿಕ ಸಂಘರ್ಷಕ್ಕೆ ಬ್ರೇಕ್ ಹಾಕಲು ಬಹಿರಂಗ ಹೇಳಿಕೆಗಳನ್ನು ನೀಡದಂತೆ ಬೆಂಬಲಿಗರಿಗೆ ಸೂಚನೆ ನೀಡಿ ನೋಟಿಸ್ ನೀಡುವ ಎಚ್ಚರಿಕೆ ನೀಡಿದ್ದರೂ ಕೆಲವು ನಾಯಕರು ಕಿವಿಕೊಡದೆ ತಮ್ಮ ಚಾಳಿಯನ್ನು ಮುಂದುವರಿಸುತ್ತಿದ್ದಾರೆ. ಈ ಮಧ್ಯೆ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಿಎಂ ಸಿದ್ದರಾಮಯ್ಯ ಪಾಳೆಯದ ಸಚಿವರಿಗೆ ಹೈಕಮಾಂಡ್ ಮಟ್ಟದಲ್ಲಿ ಟಕ್ಕರ್ ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅದೇನೆಂದರೆ ಸರ್ಕಾರದಲ್ಲಿ ಗೊಂದಲ ಸೃಷ್ಟಿಸುತ್ತಿರುವುದರ ಮೇಲೆ ಗಮನಹರಿಸಿ ಎಂದು ಹೈಕಮಾಂಡ್ ಅನ್ನು ಒತ್ತಾಯಿಸಿದ ಹೆಬ್ಬಾಳ್ಕರ್ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರೂ ನಮಗೆ ಮುಖ್ಯ. ಆದರೆ ಸರ್ಕಾರದಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಕಾಂಗ್ರೆಸ್‌ನ ಪ್ರಭಾವಿ ನಾಯಕರು. ಒಬ್ಬರು ಮಾಸ್ ಲೀಡರ್ ಆದರೆ ಮತ್ತೊಬ್ಬರು ಸಂಘಟನಾ ಚತುರ. ಇಬ್ಬರೂ ಕೂಡ ಸರ್ಕಾರದಲ್ಲಿ ಸಮರ್ಥ ನಾಯಕರು. ಕೆಲವರು ಅನಾವಶ್ಯಕ ಗೊಂದಲ ಸೃಷ್ಟಿ ಮಾಡುತ್ತಿದ್ದು ಇಂತಹ ಗೊಂದಲಗಳು ಆಗದಂತೆ ಕಡಿವಾಣ ಹಾಕಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.