
ಕಾರ್ಕಳ: ಕುಕ್ಕುಂದೂರು ಗ್ರಾಮದ ಅರ್ಬಿಪಾದೆ ಪ್ರದೇಶದಲ್ಲಿ ಅಕ್ರಮ ಶಿಲೆಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ 24 ಮಂದಿ ಆರೋಪಿಗಳಿಗೆ ಉಡುಪಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಂಚಾರಿ ನ್ಯಾಯಾಲಯ, ಕಾರ್ಕಳ) ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.
ಈ ಹಿಂದೆ ದೊರೆತಿದ್ದ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಕಾರ್ಕಳ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಸ್ಥಳದಲ್ಲಿದ್ದ ಕೂಲಿ ಕಾರ್ಮಿಕರನ್ನು ವಶಕ್ಕೆ ಪಡೆದು, ಗಣಿಗಾರಿಕೆಗೆ ಬಳಸಲಾಗುತ್ತಿದ್ದ ಲಾರಿ, ಟಿಪ್ಪರ್ ಹಾಗೂ ಕಂಪ್ರೆಶರ್ ಸೇರಿದಂತೆ ವಿವಿಧ ಯಂತ್ರೋಪಕರಣಗಳನ್ನು ಜಪ್ತಿ ಮಾಡಲಾಗಿತ್ತು.
ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ಪರವಾಗಿ ನ್ಯಾಯವಾದಿ ಬೈಲೂರು ಸದಾನಂದ ಸಾಲಿಯಾನ್ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಬಳಿಕ ನ್ಯಾಯಾಲಯವು ಆರೋಪಿಗಳಿಗೆ ನಿರ್ದಿಷ್ಟ ಷರತ್ತುಗಳೊಂದಿಗೆ ಜಾಮೀನು ನೀಡಿದೆ.

































