
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ದೇಶಾದ್ಯಂತ ನಡೆದ ವಿದ್ಯಾರ್ಥಿ ಪ್ರತಿಭಟನೆ ಮತ್ತು ಸಿಜೆಪಿ ಹೋರಾಟದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದ್ದ ಸಿಜೆಪಿ, ಸಚಿವರ ರಾಜೀನಾಮೆಗೆ ಆಗ್ರಹಿಸಿತ್ತು.
ರಾಜೀನಾಮೆ ಬಳಿಕ ಪ್ರತಿಕ್ರಿಯಿಸಿದ ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, “ಇದು ನಮ್ಮ ಹೋರಾಟದ ಗೆಲುವು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ವಿದ್ಯಾರ್ಥಿಗಳ ಹೋರಾಟದ ಫಲ” ಎಂದು ಹೇಳಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿರುವ ಧರ್ಮೇಂದ್ರ ಪ್ರಧಾನ್, ನೀಟ್ ಅಕ್ರಮ ಬೆಳಕಿಗೆ ಬಂದ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಿ, ಪರೀಕ್ಷೆಯನ್ನು ರದ್ದುಪಡಿಸಿ ಮರುಪರೀಕ್ಷೆ ಯಶಸ್ವಿಯಾಗಿ ನಡೆಸಲಾಯಿತು ಎಂದು ಉಲ್ಲೇಖಿಸಿದ್ದಾರೆ.
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದಿರುವ ಅವರು, ಯಾವುದೇ ವಿದ್ಯಾರ್ಥಿಯ ಭವಿಷ್ಯಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ನೀಟ್-ಯುಜಿ ಫಲಿತಾಂಶದಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಕಳೆದ ಕೆಲ ದಿನಗಳ ಬೆಳವಣಿಗೆಗಳು ನೋವುಂಟು ಮಾಡಿವೆ ಎಂದು ಹೇಳಿರುವ ಪ್ರಧಾನ್, ಯುವಜನರ ಆಶಯಗಳಿಗೆ ತಾವು ಸದಾ ಗೌರವ ನೀಡುತ್ತೇನೆ. ದೇಶದ ಏಕತೆ, ವಿದ್ಯಾರ್ಥಿಗಳ ಭವಿಷ್ಯ ಹಾಗೂ ರಾಷ್ಟ್ರಹಿತವೇ ತಮ್ಮ ಆದ್ಯತೆ ಎಂದು ಹೇಳಿ, ಪ್ರಧಾನಿ ಮೋದಿ ಹಾಗೂ ಸಂಪುಟದ ಸಹೋದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.


















































