
ನವದೆಹಲಿ: ಸುಪ್ರೀಂ ಕೋರ್ಟ್ ಮಂಗಳವಾರ ನೀಡಿದ ತೀರ್ಪಿನಲ್ಲಿ, ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ (SC) ಸ್ಥಾನಮಾನ ಪಡೆಯಬಹುದು ಎಂದು ಸ್ಪಷ್ಟಪಡಿಸಿದೆ. ಇತರ ಧರ್ಮಗಳಿಗೆ ಮತಾಂತರವಾದರೆ ಆ ಸ್ಥಾನಮಾನ ಕಳೆದುಕೊಳ್ಳಲಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ನ್ಯಾಯಮೂರ್ತಿಗಳಾದ ಪಿ.ಕೆ ಮಿಶ್ರಾ ಮತ್ತು ಮನಮೋಹನ್ ಅವರ ಪೀಠವು, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ (ಎಸ್ಸಿ,ಎಸ್ಟಿ ಕಾಯ್ದೆ) ಅಡಿಯಲ್ಲಿ ರಕ್ಷಣೆ ಪಡೆಯಲು ಅರ್ಹರಾಗುವುದಿಲ್ಲ ಎಂದು ತೀರ್ಮಾನಿಸಿದೆ.
ಈ ಪ್ರಕರಣವು ಚಿಂತಾಡ ಆನಂದ್ ಎಂಬ ಪಾದ್ರಿ ಸಲ್ಲಿಸಿದ ಮೇಲ್ಮನವಿಯಿಂದ ಉಂಟಾಗಿದ್ದು ಅವರು ತಮ್ಮ ವಿರುದ್ಧ ಜಾತಿ ಆಧಾರಿತ ನಿಂದನೆ ನಡೆದಿದೆ ಎಂದು ಆರೋಪಿಸಿ ಎಸ್ಸಿ/ಎಸ್ಟಿ ಕಾಯ್ದೆಯಡಿ ದೂರು ನೀಡಿದ್ದರು.
ಆದರೆ, ಆಂಧ್ರಪ್ರದೇಶದ ಹೈಕೋರ್ಟ್ ಮೇ 2025ರಲ್ಲಿ ನೀಡಿದ ತೀರ್ಪಿನಲ್ಲಿ, ಆನಂದ್ ಅವರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ SC ಸ್ಥಾನಮಾನ ಕಳೆದುಕೊಂಡಿದ್ದಾರೆ ಎಂದು ಹೇಳಿ, ದಾಖಲಾದ ಎಫ್ಐಆರ್ ಅನ್ನು ರದ್ದುಗೊಳಿಸಿತ್ತು.
ಈ ತೀರ್ಪನ್ನು ಸುಪ್ರೀಂ ಕೋರ್ಟ್ ಸಹ ಸಮರ್ಥಿಸಿ, ಮತಾಂತರಗೊಂಡ ನಂತರ ಪರಿಶಿಷ್ಟ ಜಾತಿ ಸ್ಥಾನಮಾನ ಅನ್ವಯಿಸುವುದಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.






















































