
ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.
ಕಾರ್ಕಳ ನಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಮುರಳೀಧರ ನಾಯ್ಕ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು “ಹದಿಹರೆಯದಲ್ಲಿ ಆಕರ್ಷಣೆ ಜಾಸ್ತಿ ಇರುತ್ತದೆ. ಆದ್ದರಿಂದ ದುಶ್ಚಟಗಳಿಗೆ ಬೇಗನೆ ಒಳಗಾಗುತ್ತಾರೆ. ಮಾದಕ ದ್ರವ್ಯ ಸೇವನೆಯ ದುಶ್ಚಟಕ್ಕೆ ಬಲಿ ಬಿದ್ದರೆ ಜೀವನವೇ ಸರ್ವನಾಶವಾಗಿ ಹೋಗುತ್ತದೆ. ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆಯನ್ನು ನೀಡಬೇಕು. ಮಾದಕ ದ್ರವ್ಯ ಸೇವೆನೆಯು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಹಾಳುಮಾಡುತ್ತದೆ. ಮಾದಕ ದ್ರವ್ಯವು ನಮ್ಮ ಜೀವನವನ್ನು ಸರ್ವನಾಶ ಮಾಡುವುದರ ಜೊತೆಗೆ ಸಮಾಜದಲ್ಲಿ ಅಶಾಂತಿ ಅರಾಜಕತೆಗೆ ಕಾರಣವಾಗುತ್ತದೆ. ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತವೆ. ಮಕ್ಕಳು ಮಾದಕ ದ್ರವ್ಯಗಳ ಬಗ್ಗೆ ಜಾಗರೂಕತೆಯಿಂದ ಇರುವುದರ ಜೊತೆಗೆ ಮಾದಕ ದ್ರವ್ಯ ಮಾರಾಟ ಮತ್ತು ಸೇವನೆಯ ಮಾಹಿತಿ ಇದ್ದರೆ ತಕ್ಷಣ ಪೊಲೀಸರಿಗೆ ತಿಳಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ ಕಾರ್ಯಚಟುವಟಿಕೆಗಳಿಂದ ದೂರವಿದ್ದು ಓದಿನ ಕಡೆಗೆ ಗಮನನೀಡಿ ಭವಿಷ್ಯವನ್ನು ಚೆನ್ನಾಗಿ ರೂಪಿಸಿಕೊಳ್ಳಬೇಕು” ಎಂದು ಹೇಳಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು. ವೇದಿಕೆಯಲ್ಲಿ ಸಂಸ್ಥೆಯ ಮಾದಕ ದ್ರವ್ಯ ವಿರೋಧಿ ಸಮಿತಿಯ ಅಧ್ಯಕ್ಷರಾದ ಪ್ರಾಚಾರ್ಯ, ಲಕ್ಷ್ಮಿ ನಾರಾಯಣ ಕಾಮತ್, ಸಮಿತಿಯ ಉಪನ್ಯಾಸಕ ಸದಸ್ಯರಾದ ರಸಾಯನಶಾಸ್ತç ಉಪನ್ಯಾಸಕಿ ಶ್ರೀಮತಿ ನಯನ, ಭೌತಶಾಸ್ತ್ರ ಉಪನ್ಯಾಸಕ ಪದ್ಮನಾಭ ನಾಯಕ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ ಮುಂತಾದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.