
ಬೆಂಗಳೂರು: ಬುಧವಾರ ವಿಧಾನಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ಬೇಡಿಕೆ ಪಕ್ಷಾತೀತವಾಗಿ ಕೇಳಿಬಂತು.
ಕಾಂಗ್ರೆಸ್ ಶಾಸಕ ಅಶೋಕ್ ರೈ ಈ ವಿಷಯ ಪ್ರಸ್ತಾಪಿಸಿ, ಇತರ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲೂ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದ ಅವರು ಮಂಗಳೂರು ಭಾಗದ ಸಂಸ್ಕೃತಿ ಮತ್ತು ಭಾಷೆಯ ಗೌರವಕ್ಕಾಗಿ ಈ ನಿರ್ಧಾರ ಅಗತ್ಯವೆಂದು ಅಭಿಪ್ರಾಯಪಟ್ಟರು. ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಭಾಗೀರಥಿ ಮುರುಳ್ಯ ಕೂಡ ಈ ಬೇಡಿಕೆಗೆ ಬೆಂಬಲ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮಾತನಾಡಿ, ಡಾ. ಮೋಹನ್ ಆಳ್ವ ನೇತೃತ್ವದ ಸಮಿತಿ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ ಎಂದು ತಿಳಿಸಿದರು. ಅಗತ್ಯ ಅಧ್ಯಯನ ಮತ್ತು ಸಲಹೆಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ತುಳು ಹಾಗೂ ಲಂಬಾಣಿ ಭಾಷೆಗಳಿಗೆ ಸ್ಥಾನಮಾನ ನೀಡುವ ಬಗ್ಗೆ ಪ್ರತ್ಯೇಕ ಸಭೆ ನಡೆಸುವುದಾಗಿ ಭರವಸೆ ನೀಡಿದರು.



















