
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ. ಬೈಕ್ ಟ್ಯಾಕ್ಸಿಗಳ ಮೇಲೆ ರಾಜ್ಯ ಸರ್ಕಾರ ವಿಧಿಸಿದ್ದ ನಿಷೇಧವನ್ನು ಸಮರ್ಥಿಸಿದ್ದ ಏಕ ಸದಸ್ಯ ನ್ಯಾಯಪೀಠದ ತೀರ್ಪನ್ನು ರದ್ದುಪಡಿಸಿರುವ ವಿಭಾಗೀಯ ನ್ಯಾಯಪೀಠ, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಅವಕಾಶ ಕಲ್ಪಿಸಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರನ್ನೊಳಗೊಂಡ ಪೀಠ, ಓಲಾ, ಉಬರ್ ಸೇರಿದಂತೆ ಅಗ್ರಿಗೇಟರ್ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ದ್ವಿಚಕ್ರ ವಾಹನ ಮಾಲೀಕರು ಸಾರಿಗೆ ವಾಹನವಾಗಿ ನೋಂದಣಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ರಾಜ್ಯ ಸರ್ಕಾರವು ಅಂತಹ ಅರ್ಜಿಗಳನ್ನು ಪರಿಗಣಿಸಿ ಕಾಂಟ್ರಾಕ್ಟ್ ಕ್ಯಾರೇಜ್ ಪರವಾನಗಿ ನೀಡುವಂತೆ ಕೋರ್ಟ್ ನಿರ್ದೇಶಿಸಿದೆ.
ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ಮೋಟಾರ್ ವಾಹನ ಕಾಯ್ದೆಯ ಸೆಕ್ಷನ್ 74(2) ಅಡಿಯಲ್ಲಿ ಅಗತ್ಯ ಶರತ್ತುಗಳನ್ನು ವಿಧಿಸಬಹುದಾದರೂ, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನವಾಗಿ ಬಳಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಮಾತ್ರ ಅನುಮತಿ ನಿರಾಕರಿಸಬಾರದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.








