
ನವದೆಹಲಿ: ಮಂಗಳವಾರ ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಹೇಯ ಕೃತ್ಯದ ಬೆನ್ನಲ್ಲೇ ಕೇಂದ್ರ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿದ್ದು, ಉಗ್ರರ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ತೀರ್ಮಾನಿಸಿದೆ.
ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್ಪೋಸ್ಟ್ ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧು ನದಿ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೇಂದ್ರ ಸಂಪುಟ ಸಮಿತಿ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.
ತಕ್ಷಣದಿಂದ ಜಾರಿಗೆ ಬರುವಂತೆ 1960ರ ಸೆಪ್ಟೆಂಬರ್ 19ರಂದು ಸಹಿ ಹಾಕಲಾಗಿದ್ದ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿದ್ದು ಇದರೊಂದಿಗೆ ಪಾಕಿಸ್ತಾನಕ್ಕೆ ನೀರು ಸರಬರಾಜು ಮಾಡುತ್ತಿದ್ದ ಸಿಂಧೂ ನದಿ ಮತ್ತು ಝೀಲಂ, ಚೆನಾಬ್, ರಾವಿ, ಬಿಯಾಸ್ ಮತ್ತು ಸಟ್ಲೇಜ್ ನದಿಗಳಿಂದ ನೀರು ಸರಬರಾಜು ನಿಲ್ಲಿಸುವ ತೀರ್ಮಾನಕ್ಕೆ ಬರಲಾಗಿದೆ.
ಅಲ್ಲದೇ ಸಾರ್ಕ್ ವೀಸಾ ವಿನಾಯಿತಿ ಯೋಜನೆ ವೀಸಾಗಳ ಅಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳು ಭಾರತಕ್ಕೆ ಪ್ರಯಾಣಿಸಲು ನೀಡಿದ ಅನುಮತಿಯನ್ನು ತಡೆಹಿಡಿಯಲಾಗುತ್ತಿದೆ. ಈ ಹಿಂದೆ ನೀಡಿದ್ದ ಯಾವುದೇ SVES ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಿದ್ದು ಈ ವೀಸಾ ಅಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆ 48 ಗಂಟೆಯೊಳಗೆ ಭಾರತ ತೊರೆಯಬೇಕೆಂದು ಸೂಚಿಸಿದೆ.
ಜೊತೆಗೆ ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್, ರಕ್ಷಣಾ/ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಹಂತಹಂತವಾಗಿ ಭಾರತದಿಂದ ಕಡಿತಗೊಳಿಸುವ ನಿರ್ಧಾರ ಕೈಗೊಂಡಿದೆ.




