
ಮಂಗಳೂರು: ಮಂಗಳೂರಿನಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಆರ್.ಎಸ್. ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಮಂದಿ ಕಾರ್ಯಕರ್ತರ ವಿರುದ್ಧ ಎಫ್ಎಆರ್ ದಾಖಲಾದ ಬೆನ್ನಲ್ಲೇ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ.
ನೋಟಿಸ್ ನಲ್ಲಿರುವ ಮುಖ್ಯಾಂಶ:
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಆರುಣ್ ಕುಮಾರ್ ಪುತ್ತಿಲ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ. ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ನೀವು ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್ನಲ್ಲಿ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್ನಲ್ಲಿ ಉಲ್ಲೇಖಿಸಿದ್ದಾರೆ.
ದ್ವೇಷ ಭಾಷಣ ಮಾಡುವವರ ಹಾಗೂ ಕೋಮು ಪ್ರಚೋದನೆ ಮಾಡುವವರ ವಿರುದ್ಧ ಈಗಾಗಲೇ ಕ್ರಮ ಕೈಗೊಂಡಿದ್ದು ಆದರೆ, ಅರುಣ್ ಪುತ್ತಿಲಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ನೋಟಿಸ್ನಲ್ಲಿ ಉಲ್ಲೇಖಿಸಿಲ್ಲ.





















































