
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ.
ಮೋದಿ ಅವರನ್ನು “ಹಣದುಬ್ಬರದ ವ್ಯಕ್ತಿ” ಎಂದು ಕರೆದ ರಾಹುಲ್, ಚುನಾವಣೆಗಳು ಮುಗಿದ ತಕ್ಷಣ ಇಂಧನ ದರವನ್ನು ₹8 ಹೆಚ್ಚಿಸಿ ಜನರ ಮೇಲೆ ಹೆಚ್ಚುವರಿ ಹೊರೆ ಹಾಕಲಾಗಿದೆ ಎಂದು ಆರೋಪಿಸಿದರು.
ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಲಿದೆ ಎಂದು ತಾವು ಹಿಂದೆಯೇ ಎಚ್ಚರಿಕೆ ನೀಡಿದ್ದೆ. ಮುಂದಿನ ದಿನಗಳಲ್ಲಿ ಇಂಧನ ದರ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದೂ ಅಭಿಪ್ರಾಯಪಟ್ಟರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಅಂತರರಾಷ್ಟ್ರೀಯ ಕಚ್ಚಾತೈಲ ಬೆಲೆ ಏರಿಕೆಯಾಗದಿದ್ದರೂ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ ಎಂದು ಆರೋಪಿಸಿದರು.
2014ರಿಂದ 2026ರ ಅವಧಿಯಲ್ಲಿ ಪೆಟ್ರೋಲ್ ದರ ₹71.41ರಿಂದ ₹102.12ಕ್ಕೆ ಹಾಗೂ ಡೀಸೆಲ್ ದರ ₹56.71ರಿಂದ ₹95.25ಕ್ಕೆ ಏರಿಕೆಯಾಗಿದೆ. ಕಳೆದ 12 ವರ್ಷಗಳಲ್ಲಿ ಕೇಂದ್ರ ಸರ್ಕಾರ ₹43 ಲಕ್ಷ ಕೋಟಿ ಸಂಗ್ರಹಿಸಿದೆ ಎಂದು ಅವರು ಆರೋಪಿಸಿದರು.




























