
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ನಗರದ ನೃಪತುಂಗ ರಸ್ತೆಯಲ್ಲಿನ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಉಪಸ್ಥಿತಿಯಲ್ಲಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ್ದು ಈ ವೇಳೆ ಪ್ರಚೋದನೆ, ದ್ವೇಷ ಭಾಷಣ ಮಾಡುವವರ ವಿರುದ್ಧ ಕಡ್ಡಾಯವಾಗಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ದೂರು ಬಂದ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ದ್ವೇಷ ಭಾಷಣ ಮಾಡುವವರ ವಿರುದ್ಧ, ಜನರ-ರಾಜ್ಯದ ನೆಮ್ಮದಿ ಕೆಡಿಸುವವರ ವಿರುದ್ಧ ಸ್ವಯಂಪ್ರೇರಿತ ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಿಮ್ಮ ವಿರುದ್ಧ
ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳಿಗೆ ಖಾರವಾಗಿ ಎಚ್ಚರಿಕೆ ನೀಡಿದ ಅವರು ನಾವು ವ್ಯವಸ್ಥೆಯನ್ನು ದೂಷಿಸಿಕೊಂಡು ಕೈ ಕಟ್ಟಿಕೊಂಡು ಕೂರುವುದಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿ ಆಗುವ ಜೊತೆಗೆ ಅಪರಾಧ ಮನಸ್ಥಿತಿಯವರಿಗೆ ಕಾನೂನಿನ ಬಗ್ಗೆ ಭಯ ಇರುವ ವಾತಾವರಣ ಸೃಷ್ಟಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.






















































