
ಮಂಗಳೂರು: ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಸೇರಿದಂತೆ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 2ರಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ರೆಡ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಈ ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ, ರಾಜ್ಯದಲ್ಲಿ ಮುಂಗಾರು ತೀವ್ರಗೊಂಡಿದ್ದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಗುರುವಾರ ಅತಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕೆಲವು ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.








































