
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನ್ರೇಗಾ ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧೀಜಿ ಹೆಸರಿಡುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರ್ಕಾರ ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಈ ನಿರ್ಧಾರವನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರ ಪಂಚಾಯಿತಿಗಳ ಅಧಿಕಾರವನ್ನು ಕಡಿಮೆ ಮಾಡುತ್ತಿದ್ದು, ಬಡವರ ಉದ್ಯೋಗ ಹಕ್ಕನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದ ಡಿಕೆ ಶಿವಕುಮಾರ್ ಮನ್ರೇಗಾ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆ ತರಲು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು, ಅಗತ್ಯವಿದ್ದರೆ ಬಂಧನಕ್ಕೂ ಸಿದ್ಧ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರ ದುರುದ್ದೇಶದಿಂದ ವಿಬಿ ಜಿ ರಾಮ್ ಜಿ ಎಂಬ ಯೋಜನೆಯನ್ನು ಜಾರಿ ಮಾಡಿದ್ದು ಈ ಯೋಜನೆಯಲ್ಲಿ ರಾಮ ಎಂಬುದು ಕೇವಲ ಹೆಸರಿಗಷ್ಟೇ, ಬಡವರ ಹಿತದ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಹೇಳಿದರು.
ಬಡವರು, ದಲಿತರು ಹಾಗೂ ರೈತರ ಪರ ನಿಜವಾದ ಹೋರಾಟ ಕಾಂಗ್ರೆಸ್ ಮಾತ್ರ ಮಾಡುತ್ತಿದೆ. ಮನ್ರೇಗಾ ಮರುಸ್ಥಾಪನೆಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಉಸ್ತುವಾರಿ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ದೂರು ಸಲ್ಲಿಸಿದರು.



















