
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಆಯೋಜಿಸಿದ್ದ ‘ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ’ ಉದ್ಘಾಟಿಸಿ ಮಾತನಾಡಿದ್ದು ರಾಜ್ಯ ರಾಜಕಾರಣದಲ್ಲಿ ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಬದಲಾವಣೆ ವಿಚಾರಗಳ ಚರ್ಚೆಗಳಾಗುತ್ತಿರುವ ನಡುವೆಯೇ ಮುಂದಿನ ವರ್ಷ 17ನೇ ಬಜೆಟ್ ಅನ್ನೂ ನಾನೇ ಮಂಡಿಸುತ್ತೇನೆ ಎಂದು ಹೇಳಿದ್ದಾರೆ.
ಹಾವನೂರು ಅವರು ಸಾಮಾನ್ಯ ಹಳ್ಳಿಯಲ್ಲಿ ಹುಟ್ಟಿ ಹಂತ ಹಂತವಾಗಿ ಮೇಲೆ ಬಂದವರು. ಪರಿಶಿಷ್ಟ ಜಾತಿಯಲ್ಲಿ ಹುಟ್ಟಿದಾಗ ಅನಿವಾರ್ಯವಾಗಿ ಅನೇಕ ನಿಂದನೆಗಳನ್ನು ಎದುರಿಸಬೇಕಾಗುತ್ತದೆ. ನನಗೂ ಈ ಅನುಭವ ಆಗಿದ್ದು ನಾನು ಮೊದಲ ಬಾರಿಗೆ ಹಣಕಾಸು ಸಚಿವ ಆದಾಗ ಈ ಸಿದ್ದರಾಮಯ್ಯಗೆ ನೂರು ಕುರಿ ಲೆಕ್ಕ ಹಾಕೋಕೆ ಬರಲ್ಲ. ಹಣಕಾಸು ಮಂತ್ರಿಯಾಗಿ ಬಜೆಟ್ ಮಾಡಿಸುತ್ತಾರಾ? ಏನು ಕೆಲಸ ಮಾಡುತ್ತಾರೆ ಎಂದು ಪತ್ರಿಕೆಯೊಂದರಲ್ಲಿ ಟೀಕೆ ಮಾಡಿದ್ದರು. ನಾನು ಅದನ್ನು ಸವಾಲಾಗಿ ಸ್ವೀಕರಿಸಿದ್ದೆ. ಅಂದಿನಿಂದ ಇಂದಿನವರೆಗೆ ಯಶಸ್ವಿಯಾಗಿ 16 ಬಜೆಟ್ ಮಂಡಿಸಿದ್ದೇನೆ ಎಂದು ಹೇಳಿದರು.









