
ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಸೇರಿದಂತೆ ಯಾವುದೇ ರಾಜಕೀಯ ಹೋರಾಟಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಬೆಂಬಲ ವ್ಯಕ್ತಪಡಿಸದಂತೆ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದೆ.
ಸಂಸ್ಥೆ ಮತ್ತು ಸರ್ಕಾರದ ನಡುವಿನ ಸಂಬಂಧಕ್ಕೆ ಧಕ್ಕೆ ಉಂಟುಮಾಡುವಂತಹ ಯಾವುದೇ ಹೇಳಿಕೆ ನೀಡುವುದು ಸಂಸ್ಥೆಯ ನಿಯಮ ಉಲ್ಲಂಘನೆಯಾಗಲಿದೆ ಎಂದು ಕುಲಸಚಿವರು ಸೋಮವಾರ ಹೊರಡಿಸಿದ ಮಾರ್ಗಸೂಚಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಮಾರ್ಗಸೂಚಿಯ ಪ್ರಕಾರ, ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆಗಳಿಗೆ ಸಂಬಂಧಿಸಿದ ಬೆಂಬಲದ ಪೋಸ್ಟ್‌ಗಳು ಕಂಡುಬಂದಿವೆ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಅನುಮತಿ ಇಲ್ಲದೆ ರಾಜಕೀಯ ಚರ್ಚೆ ಅಥವಾ ಚಟುವಟಿಕೆಗಳಲ್ಲಿ ಭಾಗವಹಿಸಬಾರದು ಹಾಗೂ ಯಾವುದೇ ಮಾಧ್ಯಮಕ್ಕೆ ಈ ಕುರಿತು ಹೇಳಿಕೆ ನೀಡಬಾರದು ಎಂದು ತಿಳಿಸಲಾಗಿದೆ.
ಈ ಆದೇಶಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

















































