
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಕೃಷ್ಣ ಅವರು ಕರ್ನಾಟಕಕ್ಕೆ ನೀಡಿದ ಕೊಡುಗೆಗಳನ್ನು ನೆನಪಿಸಿಕೊಂಡು ಕಂಬನಿ ಮಿಡಿದಿದ್ದಾರೆ.
ಎಸ್.ಎಂ. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಕೃಷ್ಣ ಅವರ ಸಾವಿನಿಂದ ನಾನು ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು ಎಂದು ಅವರು ಬರೆದುಕೊಂಡಿದ್ದಾರೆ.



















