
ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ಹೆಚ್ಚುತ್ತಿರುವುದು ಡೆಂಗ್ಯೂ ಪ್ರಕರಣಗಳ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ನಿರಂತರ ನಿಗಾ ವಹಿಸುತ್ತಿದ್ದು ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಬೆಡ್ ಅಥವಾ ಔಷಧ ಕೊರತೆಯಿಲ್ಲ. ಡೆಂಗ್ಯೂ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿ ತಿಳಿಸಿದೆ. ಮಳೆಗಾಲವಾದ್ದರಿಂದ ಇನ್ನೂ 2 ತಿಂಗಳು ಡೆಂಗ್ಯೂ ಹಾವಳಿ ಮುಂದುವರೆಯಲಿದ್ದು ಜನರು ಹೆಚ್ಚು ಜಾಗೃತರಾಗಿ ಮನೆಯ ಸುತ್ತ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಪ್ರತೀ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶಪಡಿಸಲಾಗುತ್ತಿದೆ.
ಹೆಚ್ಚು ಡೆಂಗ್ಯೂ ಪ್ರಕರಣ ಕಂಡುಬರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆದು ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.



















































