
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಡಿಮ್ಯಾಂಡ್ ಹೆಚ್ಚಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಅರ್ಜಿ ಸಲ್ಲಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.
ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದ್ದು, ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮಾಹಿತಿ ನೀಡಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿ ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ನಿರ್ಧರಿಸಿದ್ದು ಸಮಿತಿಯಿಂದ ಆಯ್ಕೆಯಾದ ಸಾಧಕರಿಗೆ ಮಾತ್ರ ಸರ್ಕಾರ ಪ್ರಶಸ್ತಿ ನೀಡಲಿದೆ. ಇನ್ನೂ ಈ ಬಾರಿ 70 ಜನ ಅರ್ಹ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧಾರ ಕೈಗೊಂಡಿದ್ದು ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.






















































