
ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವರಾದಂತಹ ಡಿ. ಸುಧಾಕರ್ ಅವರ ಆರೋಗ್ಯ ಪರಿಸ್ಥಿತಿ ಆತಂಕಕಾರಿಯಾಗಿದ್ದು, ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿರುವ ಅವರು ಇನ್ನಷ್ಟು ದುರ್ಬಲಗೊಂಡಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಮೊಣಕಾಲಿನ ಶಸ್ತ್ರಚಿಕಿತ್ಸೆಗಾಗಿ ಸುಧಾಕರ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದು ಕಡಿಮೆಯಾಗದ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ಪ್ರಸ್ತುತ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಸಚಿವರ ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡು, ಅವರು ಶೀಘ್ರ ಚೇತರಿಸಿಕೊಳ್ಳಲೆಂದು ಶುಭ ಹಾರೈಕೆ ವ್ಯಕ್ತಪಡಿಸಿದ್ದಾರೆ.













